ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ

ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು.

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.

ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾನ ಕಾರ್ಯ ದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು ಎಂದು ಹೇಳಿದರು.

ಹೈಕಮಾಂಡ್’ಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ತಿಳಿದಿದೆ. ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ-ತಮ್ಮ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದಾರೆಂದು ತಿಳಿಸಿದ್ದೇನೆ. ಈ ಸಭೆಗಳ ಫೋಟೋ ಹಾಗೂ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಅದನ್ನು ಮಾಡುತ್ತೇವೆಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ. ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ವಿಧಾನ ಮಂಡಲದ ಅಧಿವೇಶನದ ವೇಳೆ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಮುಂದಿನ ಬಜೆಟ್ ನಾನೇ ಮಂಡಿಸುತ್ತೇನೆ, ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಹಿನ್ನೆಲೆಯಲ್ಲಿ ಅಧಿಕಾರ ಹಸ್ತಾಂತರ ವಿಚಾರವಾಗಿ ಹೈಕಮಾಂಡ್ ಜತೆ ಚರ್ಚೆ ನಡೆಸಲಾಯಿತೇ ಎಂದು ಪತ್ರಕರ್ತರು ಕೇಳಿದಾಗ, ಈ ರೀತಿಯ ಯಾವ ಸುದ್ದಿಯೂ ಇಲ್ಲ, ಏನೂ ಇಲ್ಲ. ನಾವು ಇದರ ಬಗ್ಗೆ ಯಾವ ವಿಚಾರವನ್ನೂ ಮಾತನಾಡಲು ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

 

Leave a Reply

Your email address will not be published. Required fields are marked *